ದಾವಣಗೆರೆ: ಕ್ವಾರಂಟೈನಲ್ಲಿದ್ದ ವ್ಯಕ್ತಿಯೊಬ್ಬ ಜಿಲ್ಲಾ ಕೋವಿಡ್ ಆಸ್ಪತ್ರೆಯ ಶೌಚಾಲಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ನಗರದ ಆನೆಕೊಂಡ ಕಂಟೈನ್ಮೆಂಟ್ ನಿವಾಸಿ ಆತ್ಮಹತ್ಯೆ ಮಾಡಿಕೊಂಡವರು. ಕೆಮ್ಮು, ಜ್ವರದಂತಹ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಮೇ 20ರಂದು ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಿದ್ದು ಪ್ರಯೋಗಾಲಯದ ವರದಿ ಬರುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ವರದಿ ಪಾಸಿಟಿವ್ ಬರಬಹುದೆಂಬ ಆತಂಕ, ಮಾನಸಿಕ ಖಿನ್ನತೆಗೆ ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.