ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ನಗರದಲ್ಲಿ ಇಂತಹ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಅದರ ಕುರಿತಾಗಿ ಈಗಾಗಲೇ ಸೈಬರ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದವರು ಹೇಳಿದ್ದಾರೆ.
ಇಂತಹ ವಿಚಾರಗಳನ್ನು ಯಾವುದೇ ವ್ಯಕ್ತಿಗಳು ಸೃಷ್ಠಿಸುವುದಾಗಲಿ, ಹಂಚಿಕೊಳ್ಳುವುದಾಗಲಿ, ಅಭಿಪ್ರಾಯ ವ್ಯಕ್ತ ಪಡಿಸುವುದಾಗಲಿ ಅಥವಾ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅಂತಹ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.