ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ನಾಳೆ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ನಾಳೆಯ ಕಾರ್ಯಕ್ರಮಕ್ಕೆ ಹೆಚ್ಚು ಜನ ಪಾಲ್ಗೊಳ್ಳದಂತೆ ಮನವಿ ಮಾಡಲಾಗಿದೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಜ್ಯೂಮ್ ಆಯಪ್ ಮೂಲಕ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸುವಂತೆ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿ ನಾಲ್ಕು ತಿಂಗಳೇ ಕಳೆದಿವೆ. ಕೊರೊನಾ ಹಿನ್ನಲೆಯಲ್ಲಿ ಲಾಕ್ ಡೌನ್ ಇದ್ದ ಕಾರಣ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿರಲಿಲ್ಲ, ಮೂರು ಬಾರಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಆದರೆ, ಈಗ ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದ್ದು, ಸಿಎಂ ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ನಾಳೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ಈ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಳೆಯ ಕಾರ್ಯಕ್ರಮಕ್ಕೆ ಸಿದ್ದತೆಗಳು ಸಾಗಿದ್ದು, ಈ ಸಮಾರಂಭದಲ್ಲಿ 150 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಕೇವಲ ಹಿರಿಯ ಮುಖಂಡರಿಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಕಾರ್ಯಕರ್ತರು, ಬೆಂಬಲಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರದಂತೆ ಡಿಕೆಶಿ ಮನವಿ ಮಾಡಿದ್ದಾರೆ.