ಲಖನೌ: ದೇಶವೇ ಕುತೂಹಲದಿಂದ ಕಾಯುತ್ತಿರುವ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ನಾಳೆ (ಸೆಪ್ಟೆಂಬರ್ 30ರಂದು) ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.
ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 27 ವರ್ಷಗಳ ನಂತರ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್ ಸೇರಿದಂತೆ 32 ಮಂದಿ ಹಾಜರು ಇರಬೇಕಿದೆ.
ಮುನ್ನೆಚ್ಚರಿಕೆಯ ಕ್ರಮವಾಗಿ ಇದಾಗಲೇ ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶ ಸೇರಿದಂತೆ ಎಲ್ಲೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಸೆಪ್ಟೆಂಬರ್ 1ರಂದು ಬಾಬ್ರಿಕಟ್ಟಡ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.