ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ನೂತನ ವರ್ಷಾರಂಭದಿಂದ ಶಾಲಾ ಕಾಲೇಜುಗಳು ಆರಂಭವಾಗುತ್ತಿದ್ದು, 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಈ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು. ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕಾಗುವುದು.
ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್ 19 ರ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿಯನ್ನು ಸಲ್ಲಿಸಬೇಕು.
ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು. ಬಿಸಿಯೂಟ ವಿತರಣೆ ಇರುವುದಿಲ್ಲ. ಬದಲಿಗೆ ಪ್ರಸ್ತುತ ಜಾರಿಯಲ್ಲಿರುವಂತೆ ಆಹಾರ ಸಾಮಗ್ರಿಯನ್ನು ಒದಗಿಸಲಾಗುವುದು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಉಮಾಶಂಕರ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.