ಹೊಸ ದಿಗಂತ ವರದಿ, ಚಿಕ್ಕಮಗಳೂರು:
ಶ್ರೀರಾಮ ಸೇನೆಯ ದತ್ತಮಾಲೆ ಅಭಿಯಾನದ ಹಿನ್ನೆಲೆಯಲ್ಲಿ ನ.26 ರಂದು ಗಿರಿಶ್ರೇಣಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಡಾ. ಎಸ್.ಬಗಾದಿ ಗೌತಮ್ ಆದೇಶಿಸಿದ್ದಾರೆ.
ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ನವೆಂಬರ್ 26 ರಂದು ಶ್ರೀರಾಮ ಸೇನೆ ಸಂಘಟನೆ ಕಾರ್ಯಕರ್ತರು ಆಗಮಿಸುವ ಹಿನ್ನಲೆಯಲ್ಲಿ ನವೆಂಬರ್ 25 ರಂದು ಸಂಜೆ 6 ಗಂಟೆಯಿಂದ ನವೆಂಬರ್ 26 ರಂದು ರಾತ್ರಿ 8 ಗಂಟೆಯವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಐ.ಡಿ ಪೀಠ ಈ ಭಾಗಗಳಿಗೆ ಪ್ರವಾಸಿಗರು, ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.