ಪಾಟ್ನಾ: ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಮಾಡಬೇಕು. ಇದು ದಾಖಲೆಯ ಮಟ್ಟದ ಮತದಾನವಾಗಬೇಕು ಎಂದು ರಾಜ್ಯಪಾಲ ಫಾಗು ಚೌವ್ಹಾಣ್ ಅವರು ಹೇಳಿದ್ದಾರೆ.
ಪಾಟ್ನಾದ ದಿಘಾ ಸರ್ಕಾರಿ ಶಾಲೆಯ ಮತಗಟ್ಟೆಗೆ ತೆರಳಿ ಮತದಾನ ನಡೆಸಿದ ಬಳಿಕ ಮಾತನಾಡಿದ ಅವರು, ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಎರಡನೇ ಹಂತದಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬಿಹಾರ ಎರಡನೇ ಹಂತದ ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1316 ಪುರುಷ ಅಭ್ಯರ್ಥಿಗಳಾಗಿದ್ದರೆ, 146 ಮಹಿಳಾ ಅಭ್ಯರ್ಥಿಗಳಾಗಿದ್ದು, ಒಬ್ಬ ತೃತೀಯ ಲಿಂಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೇ ಅಕ್ಟೋಬರ್.28ರಂದು ಮೊದಲ ಹಂತದಲ್ಲಿ ದಾಖಲೆ ಮಟ್ಟದಲ್ಲಿ ಮತದಾನ ನಡೆದಿತ್ತು. ಶೇ.55.69ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.