ಚಾಮರಾಜನಗರ: ಜಿಲ್ಲೆಯಲ್ಲಿ ಹಾದು ಹೋಗುವ ಮೂಲಕ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಪುಣಜನೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯ ಬುಧವಾರ ಆರಂಭವಾಗಿದ್ದು, ಜಿಲ್ಲೆಯ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಜಿಲ್ಲೆಗೆ ಭೇಟಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಸದರಿ ರಸ್ತೆಯ ಸ್ಥಳ ಪರಿಶೀಲನೆ ನಡೆಸಿದ್ದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ, ಹೆದ್ದಾರಿಯಲ್ಲಿ ತೀವ್ರತರವಾದ ಗುಂಡಿ-ಗೊಟರುಗಳು ಬಿದ್ದಿರುವುರಿಂದ ವಾಹನಗಳ ಸಂಚಾರಕ್ಕೆ ತೀವ್ರ ವ್ಯತ್ಯಯವಾಗಿದ್ದು, ತಕ್ಷಣದಿಂದಲೇ ಹೆದ್ದಾರಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು.
ಹೆದ್ದಾರಿ ದುರಸ್ತಿಗೆ ಬಂದಿದ್ದು, ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ತಕ್ಷಣವೇ ದುರಸ್ತಿಪಡಿಸಲು ಸಂಬಂಧಿಸಿದವರಿಗೆ ಸೂಚಿಸಬೇಕೆಂದು ಸಾರ್ವಜನಿಕರು ಸಚಿವರನ್ನು ಒತ್ತಾಯಿಸಿದ್ದರು.
ಸಚಿವರ ಸೂಚನೆ ಹಿನ್ನೆಲೆಯಲ್ಲಿ ಬುಧವಾರದಿಂದಲೇ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಸಾರ್ವಜನಿಕರು ಮತ್ತು ಲಾರಿ ಮಾಲೀಕರು ಹರ್ಷ ವ್ಯಕ್ತಪಡಿಸಿದ್ದಾರೆ.