ಹೊಸ ದಿಗಂತ ವರದಿ , ಚಿಕ್ಕಮಗಳೂರು:
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಎಐಟಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಕೋವಿಡ್-19 ಬಳಿಕ ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ ಆದರೆ ಇದುವರೆಗೂ ಸರ್ಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿಲ್ಲ, ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಳಿಯಲು ಅವಕಾಶ ನೀಡಲಾಗುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಆನ್ಲೈನ್ ಶಿಕ್ಷಣದ ವೇಳೆ ಕೆಲವೊಂದು ಖಾಸಗಿ ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಿವೆ ಆದರೆ ಸರ್ಕಾರಿ ಕಾಲೇಜುಗಳಲ್ಲಿ ಯಾವುದೇ ಪಾಠ ಪ್ರವಚನಗಳು ನಡೆದಿಲ್ಲ, ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಎಲ್ಲಾ ಪದವಿ ಕಾಲೇಜುಗಳಿಗೆ ಪೂರ್ಣ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿದರು.
ಜೊತೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿರುವುದರಿಂದ ಸರ್ಕಾರಿ ವಸತಿ ನಿಲಯಗಳಲ್ಲಿ ಎಲ್ಲಾ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರು, ಮನು, ನಗರ ಕಾರ್ಯದರ್ಶಿ ತುಳಸಿ, ಸಹಕಾರ್ಯದರ್ಶಿ ವಿಖ್ಯಾತ್, ಮನೋಜ್, ಪ್ರವೀಣ್ ಹರ್ಷಿತ, ಚಂದನ್ ಸೇರಿದಂತೆ ಮತ್ತಿತರರು ಇದ್ದರು.