ಹೊಸ ದಿಗಂತ ವರದಿ, ಮಂಗಳೂರು:
ಪೌರಕಾರ್ಮಿಕರಿಗೆ ಮೀಸಲಿಟ್ಟ ಜಮೀನಿನಲ್ಲಿ ಅನಧಿಕೃತ ಕಟ್ಟಡ, ಮನೆ ನಿರ್ಮಾಣ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ಗಮನಕ್ಕೆ ಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪೌರ ಕಾರ್ಮಿಕರಿಗೆ ಸರಕಾರದಿಂದ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿಗಳು ಒತ್ತು ನೀಡಬೇಕು ಎಂದರು.
ಅಧಿಕಾರಿಗಳು ಪೌರಕಾರ್ಮಿಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು. ನಗರವನ್ನು ಸ್ವಚ್ಛವಾಗಿಡುವಲ್ಲಿ ವಿಶೇಷ ಆದ್ಯತೆ ನೀಡುವ ಪೌರ ಕಾರ್ಮಿಕರು ಆರೋಗ್ಯದತ್ತಲೂ ವಿಶೇಷ ಗಮನಹರಿಸಬೇಕು. ಅವರಿಗೆ ಸಿಗಬೇಕಾದ ಸವಲತ್ತುಗಳು ತಪ್ಪದೆ ದೊರೆಯಬೇಕು ಎಂದವರು ಹೇಳಿದರು.
ನಗರ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪೌರಕಾರ್ಮಿಕರಿಗೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ಸ್ಥಳ ನಿಗದಿಪಡಿಸಿ, ಇದಕ್ಕೆ ಪ್ರತ್ಯೇಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು. ಎಲ್ಲಾ ನಗರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಮೂಲಸೌಕರ್ಯಗಳಾದ ಶೌಚಾಲಯ, ವಸ್ತ್ರ ಬದಲಾವಣೆ ಕೊಠಡಿ, ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.