ಪ್ರಾಕೃತಿಕ ವಿಕೋಪ: ಸಾರ್ವಜನಿಕರ ರಕ್ಷಣೆಗೆ ತುರ್ತಾಗಿ ಸ್ಪಂದಿಸಲು ಇಲಾಖಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

0
90

ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆಯ ಸಮಯದಲ್ಲಿ ಪ್ರಾಕೃತಿಕ ವಿಕೋಪಗಳಿಂದ ಮಾನವ ಜೀವ ಹಾನಿ, ಜಾನುವಾರು ಹಾಗೂ ಆಸ್ತಿಹಾನಿಗಳನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮತ್ತು ವಿಕೋಪ ಸಂಭವಿಸಿದ ವೇಳೆ ಸಾರ್ವಜನಿಕರ ರಕ್ಷಣೆಗೆ ತುರ್ತಾಗಿ ಸ್ಪಂದಿಸಲು ಎಲ್ಲ ಇಲಾಖಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಸೂಚಿಸಿದ್ದಾರೆ.
ಅವರು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮುಂಗಾರು ಮಳೆ ವಿಪತ್ತು ನಿರ್ವಹಣೆ ಕುರಿತ ಮುಂಜಾಗ್ರತಾ ಉಪಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಚರಂಡಿಗಳಲ್ಲಿನ ಹೂಳು ತೆಗೆದು, ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ಜೊತೆಗೆ ಅಪಾಯಕಾರಿ ಮರಗಳನ್ನು ಗುರುತಿಸಿ, ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ, ಅವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದ ಅಪರ ಜಿಲ್ಲಾಧಿಕಾರಿ, ಪ್ರಾಕೃತಿಕ ವಿಕೋಪ ನಿಧಿಯಿಂದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಮರ ಕತ್ತರಿಸುವ ಯಂತ್ರಗಳನ್ನು ಒದಗಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ತಾಲೂಕು ವ್ಯಾಪ್ತಿಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಬೇಕು. ಸ್ಥಳೀಯ ನುರಿತ ಈಜುಗಾರರು, ಮುಳುಗು ತಜ್ಞರ ಪಟ್ಟಿಯನ್ನು ನಿಖರ ಮೊಬೈಲ್ ಸಂಖ್ಯೆಯೊಂದಿಗೆ ಸಿದ್ಧವಾಗಿಟ್ಟುಕೊಂಡು, ತುರ್ತು ಸಂದರ್ಭಗಳಿಗಾಗಿ ದೋಣಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಹಾನಿಯಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ನಷ್ಟದ ವರದಿ ಸಿದ್ಧಪಡಿಸಿ, ಸಂತ್ರಸ್ತರಿಗೆ ನಿಗದಿತ ಅವಧಿಯೊಳಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಡಿಸಿ ಬಿ.ಸದಾಶಿವ ಪ್ರಭು ಸೂಚಿಸಿದರು.
ಕಡಲುಕೊರೆತ ಸಂಭವಿಸುವ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ ಈ ಕುರಿತು ನಡೆಯುತ್ತಿರುವ ಕಾಮಗಾರಿಗಳ ಕುರಿತು ಎಡಿಬಿ ಮತ್ತು ಬಂದರು ಇಲಾಖೆ ಅಧಿಕಾರಿಗಳು ಪರಿಶೀಲಿಸಿ, ಸಮಸ್ಯೆಗಳು ಬಾರದಂತೆ ಎಚ್ಚರವಹಿಸಬೇಕು ಎಂದ ಅವರು, ಪ್ರಾಕೃತಿಕ ವಿಕೋಪ ಸಂದರ್ಭ ತುರ್ತಾಗಿ ಸ್ಪಂದಿಸಲು ಎಲ್ಲ ಹೋಬಳಿಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಹಾಗೂ ಗ್ರಾಮ ಮಟ್ಟದಲ್ಲಿ ಸಹ ತುರ್ತು ಕಾರ್ಯಪಡೆ ರಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ಸ್ಥಗಿತಗೊಂಡಿರುವ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕಲ್ಲುಕೋರೆಗಳಿಗೆ ಸೂಕ್ತ ತಡೆ ಬೇಲಿ ಹಾಕಿ, ಸೂಚನಾ ಲಕ ಅಳವಡಿಸಿರುವುದನ್ನು ಖಚಿತಪಡಿಸಬೇಕು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದ ಕೋರೆಗಳ ಪರವಾನಗಿ ರದ್ದುಗೊಳಿಸಿ, ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here