ಹೊಸದಿಗಂತ ವರದಿ, ಕೊಡಗು:
ಬಾರ್ನಲ್ಲಿ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೇ ರೆಡ್ ಹ್ಯಾಂಡ್ ಆಗಿ ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀರಾಜಪೇಟೆಯ ಸೈಂಟ್ ಆನ್ಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಬಾರ್ಗೆ ಹೋಗಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ವಿಷಯ ತಿಳಿದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮದುಲೈಮುತ್ತು ಬಾರ್ಗೆ ತೆರಳಿ ವಿದ್ಯಾರ್ಥಿಗಳನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಬುದ್ಧಿವಾದ ಹೇಳಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭ ಜೊತೆಗಿದ್ದ ವಿದ್ಯಾರ್ಥಿಯೊಬ್ಬ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ತಕ್ಷಣವೇ ಆ ವಿದ್ಯಾರ್ಥಿಯನ್ನು ಹಿಡಿದು, ಆತನಿಗೂ ಬುದ್ಧಿವಾದ ಹೇಳಿ ಕಳುಹಿಸಿಕೊಟ್ಟಿದ್ದಾರೆ.
ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿಗಳಿಗೆ ಬಾರ್ನಲ್ಲಿ ಮದ್ಯ ಪೂರೈಕೆ ಮಾಡಿದ ಬಾರ್ ಮ್ಯಾನೇಜರ್ಗೆ ಕ್ಲಾಸ್ ತೆಗೆದುಕೊಂಡ ಕಾಲೇಜಿನ ಪ್ರಾಂಶುಪಾಲರು, ಶಾಲೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಮವಸ್ತ್ರಗಳನ್ನು ನೋಡಿ ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿ ಕಳುಹಿಸುವ ಜವಾಬ್ದಾರಿ ತಮಗೂ ಇದೆ. ಆದರೆ ಹಣದ ಆಸೆಗೆ ಈ ರೀತಿ ವಿದ್ಯಾರ್ಥಿಗಳಿಗೆ ನೀವೇ ಮದ್ಯವನ್ನು ನೀಡಿರುವುದು ಸರಿಯಲ್ಲ. ಈ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದರು.
ಇದೀಗ ಈ ವಿಡಿಯೋ ವೈರಲ್ ಆಗಿದೆ.