ಬೆಳಗಾವಿ : ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರು ಹಾಗೂ ಇತರೆ ಬಡ ವರ್ಗದ ಜನರಿಗೆ ಮನೆ ಬಾಡಿಗೆ ನೀಡುವಂತೆ ಮನೆ ಮಾಲೀಕರು ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ಕಾರಣಕ್ಕೆ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಇಂತಹ ಕುಟುಂಬಗಳಿಗೆ ಮನೆ ಬಾಡಿಗೆ ಪಾವತಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕು.
ಕಾಲಾವಕಾಶ ನೀಡದೇ ಮನೆ ಬಾಡಿಗೆ ನೀಡುವಂತೆ ಒತ್ತಡ ಹೇರಿದರೆ ಅಥವಾ ಪೀಡಿಸಿದರೆ ಅಂತಹ ಮನೆ ಮಾಲೀಕರ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಒತ್ತಾಯಿಸಬಾರದು.
ಲಾಕ್ ಡೌನ್ ಸಂದರ್ಭ ಉದ್ಯೋಗ ಕಳೆದುಕೊಂಡು ಅಥವಾ ವ್ಯಾಪಾರ-ವಹಿವಾಟು ಇಲ್ಲದೇ ಅನೇಕ ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಹಾಗೂ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿಸುವಂತೆ ಒತ್ತಾಯಿಸಬಾರದು. ಒಂದು ವೇಳೆ ಸಾಲ ಮರುಪಾವತಿಗೆ ಒತ್ತಾಯಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.