ಬೆಳಗಾವಿ : ಕೊರೋನಾ ಮಹಾಮಾರಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ತೆರಿಗೆ ಸಂಗ್ರಹ ಮಾಡುವುದನ್ನು ಒಂದು ವರ್ಷ ಮುಂದೂಡಲಾಗಿದೆ. ಅದೇ ರೀತಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಂದು ವರ್ಷಗಳ ಕಾಲ ತೆರಿಗೆ ಸಂಗ್ರಹವನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೆರಿಗೆ ತುಂಬಲು ಕಷ್ಟವಾಗುತ್ತದೆ ಎಂದು ರಾಜ್ಯ ಸರ್ಕಾರ ಒಂದು ವರ್ಷ ತೆರಿಗೆ ಸಂಗ್ರಹ ಮಾಡುವುದನ್ನು ಮುಂದೆ ಹಾಕಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿಯೂ ಜನರು ಸಾಕಷ್ಟು ನೋವುಗಳನ್ನು ಅನುಭವಿಸಿದ್ದಾರೆ. ಈ ದೃಷ್ಟಿಯಲ್ಲಿ ಮಹಾನಗರ ಪಾಲಿಕೆಯ ಒಂದು ವರ್ಷದ ತೆರಿಗೆಯನ್ನು ಸಾರ್ವಜನಿಕರಿಂದ ಭರಿಸಿಕೊಳ್ಳದಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಚಿವ ರಮೇಶ ಜನ ಜಾರಕಿಹೊಳಿ ಸ್ಪಷ್ಟಪಡಿಸಿದರು.