ಹೊಸ ದಿಗಂತ ವರದಿ, ಮಂಗಳೂರು
ಕಳೆದ ಕೆಲವು ತಿಂಗಳಿನಿಂದ ಬಿಸಿಯೂಟ ನೌಕರರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನೌಕರರಿಗೆ ವೇತನ ಏರಿಕೆಯೊಂದಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಬಿಸಿಯೂಟ ನೌಕರರು ಸರಕಾರವನ್ನು ಒತ್ತಾಯಿಸಿದ್ದಾರೆ.
ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನ.26ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ಸೋಮವಾರ ನಗರದ ಮಿನಿ ವಿಧಾನಸೌಧದ ಮುಂಭಾಗ ಬಿಸಿಯೂಟ ಕಾರ್ಮಿಕರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ವಸಂತ ಆಚಾರಿ, ಬಿಸಿಯೂಟ ಕಾರ್ಮಿಕರಿಗೆ ಕನಿಷ್ಟ ವೇತನ ಒದಗಿಸುವುದರೊಂದಿಗೆ ಅವರಿಗೆ ಕೆಲಸದ ಭದ್ರತೆ ಒದಗಿಸಬೇಕು. ಈ ಕೆಲಸವನ್ನೇ ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಸದ್ಯ ಕೆಲಸವಿಲ್ಲದೆ ಕಂಗಾಲಾಗಿವೆ ಎಂದರು.
ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಾಲೂಕು ಆಹಾರ ಅಧಿಕಾರಿಗಳಿಗೆ ಹಾಗೂ ಡಿಡಿಪಿಐಯವರಿಗೆ ಮನವಿ ಸಲ್ಲಿಸಲಾಯಿತು.