ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಜಿಲ್ಲಾ ಆಸ್ಪತ್ರೆ)ಯ ರೇಡಿಯೋಲಜಿ ವಿಭಾಗದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವಿಲ್ಲದೆ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇದೀಗ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇವೆಯನ್ನು ಆರಂಭಿಸಲಾಗಿದೆ.
ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವಿದ್ದು, ರೇಡಿಯೋಲಜಿ ವಿಭಾಗದಲ್ಲಿ ವೈದ್ಯರು ಇಲ್ಲದ ಕಾರಣ ಉಪಯೋಗವಾಗದೇ ಇದ್ದ ಹೊಸ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದ ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯವಿದ್ದು, ಇಂದಿನಿಂದ ಸಾರ್ವಜನಿಕರಿಗೆ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಅಲ್ಲದೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ರೇಡಿಯೋಲಜಿ, ಕ್ಷಯ ರೋಗ, ದಂತ ಚಿಕಿತ್ಸೆ, ಅರವಳಿಕೆ ಶಾಸ್ತ್ರ, ಶಸ್ತ್ರ ಚಿಕಿತ್ಸೆ, ಸ್ತ್ರೀ ಮತ್ತು ಪ್ರಸೂತಿ ರೋಗ, ರೋಗ ಲಕ್ಷಣ ಶಾಸ್ತ್ರ ವಿಭಾಗಗಳಿಗೆ ಬೋಧಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಈ ಎಲ್ಲಾ ವೈದ್ಯರು ಸಹ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಅವರು ಹೇಳಿದ್ದಾರೆ.