ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಜೂ.11ರಂದು ಜಿಲ್ಲೆಯಲ್ಲಿ ವ್ಯಾಪಕವಾಗಿ ಚದುರಿದಂತೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಂಭವವಿದ್ದು, ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿ ಜೂ.12ರಂದು ಜಿಲ್ಲೆಯಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಜೂ.13 ಮತ್ತು 14ರಂದು ಭಾರೀ (115.6 ಮಿ.ಮೀ.ನಿಂದ 204.4 ಮಿ.ಮೀ) ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದಲ್ಲಿ 24*7 ಕಂಟ್ರೋಲ್ ರೂಂ. ಸಂಖ್ಯೆ 08272-221077 ಅಥವಾ ವಾಟ್ಸ್ಆಪ್ಸಂಖ್ಯೆ 8550001077ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.