ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ನಮನ ಸಲ್ಲಿಸಿದರು.
ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.
ವಾಜಪೇಯಿ ಅವರ ಎರಡನೇ ಪುಣ್ಯ ತಿಥಿ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ವಿಡಿಯೋ ಜೊತೆ ‘ಪ್ರೀತಿಯ ಅಟಲ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ. ಭಾರತವು ಅವರ ಅತ್ಯುತ್ತಮ ಸೇವೆ ಮತ್ತು ನಮ್ಮ ರಾಷ್ಟ್ರದ ಪ್ರಗತಿಯತ್ತ ಮಾಡಿದ ಪ್ರಯತ್ನಗಳನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ’ ಎಂದು ಹೇಳಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16, 2018 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.