ನವದೆಹಲಿ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರು ಇನ್ನುಮುಂದೆ ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿದೆ.
ಶಿಕ್ಷಣದಲ್ಲಿ ಏಕರೂಪತೆ ತರುವುದು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಿಸುವತ್ತ ಗಮನಹರಿಸುವುದು ಹೊಸ ನೀತಿಯ ಗುರಿಯಾಗಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ೨೧ ನೇ ಶತಮಾನದ ಹೊಸ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ ನೀಡಿದೆ. ಕಳೆದ ೩೪ ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ಹೊಸ ಶೈಕ್ಷಣಿಕ ಅಧಿವೇಶನ ಪ್ರಾರಂಭವಾಗಲಿದೆ. ಇದಕ್ಕೂ ಮೊದಲೇ ಈ ನೀತಿಯನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವು ತನ್ನ ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾಯಿಸುವಂತೆ ಶಿಫಾರಸು ಮಾಡಿತ್ತು. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಇದನ್ನು ಅಂಗೀಕರಿಸಲಾಗಿದೆ.
ಕೇಂದ್ರ ಶಿಕ್ಷಣ ಇಲಾಖೆಯು ಶೈಕ್ಷಣಿಕ ಮತ್ತು ಕಲಿಕೆಯ ವಿಷಯವಾಗಿ ಹೆಚ್ಚಿನ ಒತ್ತು ನೀಡುವಂತೆ ಮಾಡುವ ಉದ್ದೇಶಕ್ಕಾಗಿ ಸಚಿವಾಲಯದ ಹೆಸರನ್ನು ಬದಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
೧೯೮೫ರಲ್ಲಿ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅವರ ಮನೋಇಂಗಿತದಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಹೆಸರನ್ನು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿತ್ತು.