Monday, August 8, 2022

Latest Posts

ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಗ್ಯಾಸ್ ಸಿಲಿಂಡರ್‌ ಸ್ಫೋಟ

ಹೊಸ ದಿಗಂತ ವರದಿ , ಮಂಗಳೂರು:

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಭಾನುವಾರ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡಿದ್ದು, ಬೋಟ್ ನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ಗಾಯಗೊಂಡ ಓರ್ವ ಮೀನುಗಾರ ಹಾಗೂ ಇತರ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ನೌಕೆಯು ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದೆ. ಪರಿಣಾಮ ದೋಣಿಯು ಬೆಂಕಿ ಗೆ ಆಹುತಿಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆಯು ಕೂಡಲೇ ಕಾರ್ಯೋನ್ಮುಖವಾಯಿತು. ಮುಂಬೈ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕಾಗಿ ಕಳುಹಿಸಲಾಯಿತು. ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ಡಾರ್ನಿಯರ್ ವಿಮಾನವನ್ನೂ ಕಳುಹಿಸಲಾಯಿತು.
ಈ ಪಡೆಯು ದೋಣಿ ಪತ್ತೆ ಮಾಡುವ ಜತೆಗೆ ಮೀನುಗಾರರ ನೌಕೆಯೊಂದಿಗೆ ಸಂವಹನ ಸಾಧಿಸಿ ಧೈರ್ಯ ತುಂಬಿದೆ. ಅದೇ ಸ್ಥಳಕ್ಕೆ ಕೋಸ್ಟ್‌ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡ ಓರ್ವನನ್ನು ಪ್ರಥಮ ಚಿಕಿತ್ಸೆಗೊಳಪಡಿಸಿ ಕರಾವಳಿ ಒಡೆಯ ನೌಕೆಗೆ ಸ್ಥಳಾಂತರಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss