ಬೆಳಗಾವಿ : ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಅಚ್ಚುಕಟ್ಟಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭಾ ಭವನದಲ್ಲಿ
ಅಗಸ್ಟ್ ೧೫ ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭದಲ್ಲಿ ಭಾಗವಹಿಸಬೇಕು ಎಂದರು.
ವೈದ್ಯರು, ಆಶಾ ಕಾರ್ಯಕರ್ತೆಯರು ಮತ್ತಿತರ ಕೊರೊನಾ ವಾರಿಯರ್ಸ್ ಹಾಗೂ ಕೋವಿಡ್-೧೯ ಸೋಂಕಿನಿಂದ ಗುಣಮುಖರಾದ ಐದು ಜನರನ್ನು ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಆಹ್ವಾನಿಸಿ, ಅವರನ್ನು ಸತ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಪೊಲೀಸ್ ತಂಡ, ಗೃಹರಕ್ಷಕದಳ, ಅಗ್ನಿಶಾಮಕ ದಳ, ಎನ್.ಸಿ.ಸಿ ಮತ್ತು ಸ್ಕೌಟ್ಸ್ ಕೆಡೆಟ್ ಗಳು ಮಾತ್ರ ಪರೇಡ್ ನಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ವಿದ್ಯಾರ್ಥಿ ತಂಡಗಳಿಗೆ ಪರೇಡ್ ನಲ್ಲಿ ಅವಕಾಶವಿರುವುದಿಲ್ಲ. 12 ಪ್ಲಟೂನ್ ಗಳು ಮಾತ್ರ ಪರೇಡ್ ನಲ್ಲಿ ಭಾಗವಹಿಸಲಿದ್ದು, ಸಂಬಂಧಿಸಿದ ಅಧಿಕಾರಿಗಳು ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ,
ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮುನ್ಯಾಳ ಮತ್ತು ವಿವಿಧ ಗಣ್ಯರು, ಉಪ ಸಮಿತಿಗಳ ಅಧ್ಯಕ್ಷರು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.