Friday, January 22, 2021

Latest Posts

ಮುಂದಿನ ಮೂರು ತಿಂಗಳು ನಮಗೆ ಸವಾಲು: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ನಿರ್ವಹಣೆ ಕುರಿತ ಅಧಿಕಾರಿಗಳು ಮತ್ತು ತಜ್ಞರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.19 ರವರೆಗೆ ಬೆಂಗಳೂರಿನಲ್ಲಿ 13.20 ಲಕ್ಷ ಪರೀಕ್ಷೆ ಮಾಡಲಾಗಿದೆ. ಒಂದೇ ತಿಂಗಳಲ್ಲಿ 22.90 ಲಕ್ಷ ಪರೀಕ್ಷೆ ಮಾಡಲಾಗಿದೆ. ಅಂದರೆ, ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಲಾಗಿದೆ. ಕಳೆದ ತಿಂಗಳಿಗೆ ಹೋಲಿಸಿದರೆ, 9.70 ಲಕ್ಷದಷ್ಟು ಪರೀಕ್ಷೆ ಹೆಚ್ಚಿಸಲಾಗಿದೆ. ಮುಂಬೈ, ಚೆನ್ನೈ, ಅಹಮದಾಬಾದ್, ದೆಹಲಿ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರೀಕ್ಷೆ ಅತಿ ಹೆಚ್ಚಿದೆ. ಬೇರೆ ನಗರಗಳ ಸರಾಸರಿ ಪರೀಕ್ಷಾ ಹೆಚ್ಚಳ ಪ್ರಮಾಣ ಶೇ.49 ರಷ್ಟಿದೆ ಎಂದು ವಿವರಿಸಿದರು.
ಪರೀಕ್ಷೆ ಬೇಗನೆ ಮಾಡಿ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡಿದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.37 ರಷ್ಟಿದೆ. ಇದನ್ನು ಶೇ.1 ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ.1.14 ರಷ್ಟಿದೆ. ಇದು ನಾವು ಹೊಂದಿರುವ ಗುರಿಗೆ ಅತಿ ಸಮೀಪದಲ್ಲೇ ಇದ್ದು, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ಸೋಂಕಿತರ ಪ್ರಮಾಣ ಕೂಡ ಕಡಿಮೆಯಾಗುತ್ತಿದೆ ಎಂದು ವಿವರಿಸಿದರು.
ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದರಿಂದಲೇ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕಡಿಮೆ ಸೋಂಕಿತರ ಸಂಖ್ಯೆ ತೋರಿಸಬೇಕೆಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಸೋಂಕಿತರು ಸಂಖ್ಯೆ ಏರಲು ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದೇ ಕಾರಣ ಎಂಬ ಸೂಕ್ಷ್ಮವನ್ನು ಅರಿಯಬೇಕು ಎಂದರು.
ಮೈಸೂರಿನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಾಡಿರುವ ದೀಪ ಅಲಂಕಾರ ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಜನರು ಬರುತ್ತಿದ್ದಾರೆ. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಮುಂದೆ ಒಂದೆರಡು ದಿನ ಇದೇ ಸ್ಥಿತಿ ಮುಂದುವರಿದರೆ ಅಧಿಕಾರಿಗಳು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ನಿರ್ಬಂಧ ವಿಧಿಸುವುದು ಅನಿವಾರ್ಯ ಎಂದು ಸಚಿವ ಸುಧಾಕರ್ ಅವರು ಎಚ್ಚರಿಕೆ ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!