Saturday, July 2, 2022

Latest Posts

ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ: ಶಾಸಕ ಜಿ.ಟಿ.ದೇವೇಗೌಡ

ಹೊಸದಿಗಂತ ವರದಿ,ಮೈಸೂರು:

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಮೈತ್ರಿ ಸರ್ಕಾರ ಪತನದ ಕುರಿತು ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಪರಸ್ಪರ ಆರೋಪ, ಪ್ರತ್ಯಾರೋಪ, ಟೀಕೆ ಮಾಡುತ್ತಿರುವುದಕ್ಕೆ ಭಾನುವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು. ಗೊತ್ತಿದ್ದರೂ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು. ಶಾಸಕರು ಬಿಟ್ಟು ಹೋಗುತ್ತಾರೆ ಅಂತ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ತಡೆಯಬಹುದಿತ್ತು. ಆದರೆ, ತಡೆಯುವ ಪ್ರಯತ್ನ ಮಾಡಲಿಲ್ಲ. ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು ಎಂದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ತಮ್ಮ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಈ ಮೊದಲು ವರುಣ ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲ್ಲೂಕು ಬೋರ್ಡ್ ಮೆಂಬರ್ನಿAದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು. ವರುಣ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು.

ಜಾ.ದಳ-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂಬ ಆರೋಪಕ್ಕೆ ಉತ್ತರಿಸಿ, ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8 ಸಾವಿರ ಮತಗಳನ್ನು ಪಡೆದಿತ್ತು. ಆಗ ಹೇಮಂತ್ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು. ಬಿಜೆಪಿ 15 ಸಾವಿರ ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ಓಟ್ ಪಡೆದುಕೊಂಡಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದವನ್ನು ಅಲ್ಲಗೆಳೆದರು.

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪುತ್ರನೊಂದಿಗೆ ಷಷ್ಠಿ ಪೂಜೆ ನೆರವೇರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss