Sunday, August 14, 2022

Latest Posts

ಯಾದಗಿರಿ| ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ನಡೆಸುವ ಆರ್‌ಟಿಪಿಸಿಆರ್ ಲ್ಯಾಬ್ ಉದ್ಘಾಟನೆ

ಯಾದಗಿರಿ:  ತಾಲ್ಲೂಕಿನ ಮುದ್ನಾಳ ಸಮೀಪದ ಕೋವಿಡ್-19 ಆಸ್ಪತ್ರೆ (ಹೊಸ ಜಿಲ್ಲಾಸ್ಪತ್ರೆ)ಯಲ್ಲಿ ಕೊರೊನಾ ಪರೀಕ್ಷೆ ನಡೆಸುವ ಆರ್.ಟಿ.ಪಿ.ಸಿ.ಆರ್. ಲ್ಯಾಬ್ ಅನ್ನು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಶುಕ್ರವಾರ ಉದ್ಘಾಟಿಸಿದರು.
ಆರ್.ಟಿ.ಪಿ.ಸಿ.ಆರ್. ಲ್ಯಾಬ್ ಪರಿಶೀಲಿಸಿದ ಸಚಿವರು, ಲ್ಯಾಬ್ ಕಾರ್ಯನಿರ್ವಹಣೆ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಸರ್ಕಾರದ ಮಾರ್ಗಸೂಚಿಗಳನ್ವಯ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಾದರಿಗಳನ್ನು ಪರೀಕ್ಷೆ ಮಾಡಬೇಕು. ಪರೀಕ್ಷೆಯಲ್ಲಿ ಲೋಪ ಕಂಡುಬರಬಾರದು. ಲ್ಯಾಬ್‌ನಲ್ಲಿ ಕಾರ್ಯನಿರ್ವಹಿಸುವ ತಂತ್ರಜ್ಞರು ಮತ್ತು ಸಿಬ್ಬಂದಿಗಳು ವೈಯಕ್ತಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್. ಲ್ಯಾಬ್ ಸ್ಥಾಪನೆ ಆಗಿರುವುದರಿಂದ ಕೊರೊನಾ ಪರೀಕ್ಷೆಗಾಗಿ ಬೆಂಗಳೂರು ಮತ್ತು ಕಲಬುರಗಿಗೆ ಮಾದರಿಗಳನ್ನು ಕಳುಹಿಸುವುದು ತಪ್ಪಲಿದೆ. ಇದರ ಜೊತೆಗೆ ಪಾಸಿಟಿವ್ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಲು ಮತ್ತು ವೈರಸ್ ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾದ ವ್ಯಕ್ತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹೂಗುಚ್ಛ ನೀಡಿ ಬೀಳ್ಕೊಟ್ಟರು.
ಮೊಬೈಲ್ ಫೀವರ್ ಕ್ಲಿನಿಕ್‌ಗೆ ಚಾಲನೆ: ನಂತರ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂಭಾಗದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಹಾಗೂ ಸ್ವಾಬ್ ಸಂಗ್ರಹಣ ಬಸ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss