ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಜೋರು ಮಳೆಯಾಗುತ್ತಿದ್ದು, ಜಲಾಶಯಕ್ಕೆ 13ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 16 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಯಾವುದೇ ಕ್ಷಣದಲ್ಲಿ ಇದು ಹೆಚ್ಚಾಗಿ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತದೆ. ಇದರಿಂದಾಗಿ ನದಿಯಲ್ಲಿ ಪ್ರವಾಹ ಉಂಟಾಗಲಿದೆ. ಹಾಗಾಗಿ ನದಿ ಪಾತ್ರದ ಜನರು ತಮ್ಮ ಆಸ್ತಿ, ಪಾಸ್ತಿ, ಜಾನುವಾರು ಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ