ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದುವರೆಗೆ ರಾಜ್ಯದಲ್ಲಿ 690269 ಮಂದಿಗೆ ಕೊರೋನಾ ಸೋಂಕು ದೃಢವಾಗಿದ್ದು,ಈ ಪೈಕಿ 118851 ಸಕ್ರಿಯ ಪ್ರಕರಣಗಳಿವೆ. ಅಲ್ಲದೇ 873 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 114 ಮಂದಿ ಕೊರೋನಾಗೆ ಬಲಿಯಾಗಿದ್ದು ಇದುವರೆಗೆ ಸಾವನಪ್ಪಿರುವವರ ಸಂಖ್ಯೆ 9789ಕ್ಕೇರಿದೆ.
ಜನರ ನಿರ್ಲಕ್ಷ್ಯ-ಸೋಂಕಿತರ ಸಂಖ್ಯೆ ಏರಿಕೆ
ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಜನರನ್ನು ಆತಂಕಕ್ಕೆ ತಳ್ಳಿದೆ. ತಿಂಗಳ ಹಿಂದೆ ರಸ್ತೆಗಳಲ್ಲಿ,ಮೆಟ್ರೋ,ಬಸ್ಗಳಲ್ಲಿ ಓಡಾಡುವವರ ಸಂಖ್ಯೆಗಿಂತ ಈಗ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಸಾರ್ವಜನಿಕರೂ ಕೊರೋನಾ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು ಇದುವೇ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.