ಹೊಸ ದಿಗಂತ ವರದಿ, ಚಿತ್ರದುರ್ಗ:
ರಾಜ್ಯ ಸಚಿವ ಸಂಪುಟದಲ್ಲಿರುವ ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯ ಸಚಿವರು ಬೆಂಗಳೂರು, ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ. ಸಚಿವ ಸಂಪುಟದಲ್ಲಿ ಕೇವಲ ಎರಡೇ ಜಾತಿಯ ಸಚಿವರುಗಳಿದ್ದಾರೆ. ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಅನುಭವಿಸಿದ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದು ಅಚ್ಚರಿ ತಂದಿದೆ. ಪಕ್ಷ ಅಧಿಕಾರಕ್ಕೆ ಬರಲು ಅವರ ಕೊಡುಗೆ ಏನು? ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೂ ಮಣೆ ಹಾಕಲಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.
ಕಳೆದ 51 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಐದು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ಜೀವನದ ಬಹುತೇಕ ಸಮಯವನ್ನು ರಾಜಕೀಯದಲ್ಲೇ ಕಳೆದಿದ್ದೇನೆ. ಬಿಜೆಪಿಯಿಂದ ಎರಡು ಬಾರಿ ಗೆದ್ದು ಶಾಸಕನಾಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಮೂರು ಬಾರಿ ಅಧಿಕಾರಕ್ಕೆ ಬಂದರೂ ನನಗೆ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿದೆ. ಚಿತ್ರದುರ್ಗ ಜಿಲ್ಲೆಗೆ ಹಾಗೂ ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.