ಮಂಗಳೂರು: ನಗರದಲ್ಲಿ ನ.5ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮುಂಬರುವ ಸರಣಿ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತಾದ ಚರ್ಚೆ ಮುನ್ನೆಲೆಗೆ ಬರಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಮುನ್ನುಡಿ ಬರೆಯಲಿದೆ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬಿಜೆಪಿ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಂತರ ನಡೆಯುವ ಪ್ರಥಮ ಕಾರ್ಯಕಾರಿಣಿ ಸಭೆ ಇದಾಗಿದೆ. ಸಭೆಯಲ್ಲಿ ಪಕ್ಷದ ವರಿಷ್ಠರ ಮಾರ್ಗದರ್ಶನ ಪಡೆಯಲಾಗುವುದು. ೨೦ ವರ್ಷಗಳ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನ ಕೈಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಆಭಾರಿಯಾಗಿದ್ದೇನೆ ಎಂದು ಮಂಗಳವಾರ ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ರಾಜ್ಯದ ಉಪಮುಖ್ಯಮಂತ್ರಿಗಳು, ಪಕ್ಷದ ಪ್ರಮುಖರು, ಪ್ರಭಾರಿಗಳು ಭಾಗವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಿ, ಮಾರ್ಗದರ್ಶನ ನೀಡುವರು ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಯಶಸ್ಸಿಗೆ ಬಿಜೆಪಿ ದ.ಕ. ಜಿಲ್ಲಾ ಘಟಕ ಕಳೆದ ೮ದಿನಗಳಿಂದ ಶ್ರಮ ವಹಿಸುತ್ತಿದೆ. ಆಗಮಿಸುವ ೧೪೦ ಮಂದಿ ಪ್ರತಿನಿಧಿಗಳಿಗೆ ಬೇಕಾದ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಕಲ್ಪಿಸಲು ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಸಭೆಯಲ್ಲಿ ಎರಡು ನಿರ್ಣಯ ಕೈಗೊಳ್ಳಲಾಗುವುದು. ಇಡೀ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಮಹತ್ವದ ತಿರುವು ನೀಡುವ ಸಭೆ ಇದಾಗಿದೆ ಎಂದರು.
ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯ ಸುತ್ತಿ ಪಕ್ಷ ಸಂಘಟನೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಸಂಘಟನೆಗೆ ಹೊಸ ರೂಪ ನೀಡಿದ್ದಾರೆ. ನಳಿನ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ನಾಲ್ಕೈದು ಬಾರಿ ರಾಜ್ಯದ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ೩೧೦ ಸಂಘಟನಾತ್ಮಕ ಮಂಡಲಗಳಿವೆ, ೫೬ ಸಾವಿರ ಬೂತ್ಗಳಿವೆ. ಬೂತ್ಗಳೊಂದಿಗೆ ನಿರಂತರ ಸಂಪರ್ಕ ಇರಿಸಿ ಪಕ್ಷ ಬೆಳೆಸುವ ಕೆಲಸವಾಗುತ್ತಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದರು.
ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಹಪ್ರಭಾರಿಗಳಾದ ಗೋಪಾಲಕೃಷ್ಣ ಹೇರಳೆ, ರಾಜೇಶ್ ಕಾವೇರಿ, ಜಿಲ್ಲಾಧ್ಯಕ್ಷ ಸುದರ್ಶನ ಎಂ., ಜಿಲ್ಲಾ ವಕ್ತಾರ ಜಗದೀಶ ಶೇಣವ ಉಪಸ್ಥಿತರಿದ್ದರು.