ವಿಜಯಪುರ: ನಗರದ ಹೊರವಲಯ ಅರಕೇರಿ ಬಳಿ ಸಾಗುತ್ತಿದ್ದ ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಾರಿ ಸುಟ್ಟು ಭಸ್ಮಗೊಂಡಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ, ಕ್ಲೀನರ್ ಲಾರಿಯಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮಿಳುನಾಡು ಮೂಲದ ಲಾರಿ ತಮಿಳುನಾಡಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ವಿಜಯಪುರದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಸಾವಿರಾರು ಬೆಂಕಿಪೊಟ್ಟಣಗಳಿಗೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡ ಕಾರಣ ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಹರಡಿದ್ದು, ಹೆದ್ದಾರಿಯ ಎರಡೂ ಬದಿಯ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.