Thursday, June 30, 2022

Latest Posts

ವಿರಾಜಪೇಟೆ| ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ : ಶಾಸಕ ಕೆ.ಜಿ.ಬೋಪಯ್ಯ

ವಿರಾಜಪೇಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ ಸಾಕಷ್ಟು ಮುನ್ನೆಚ್ಚರಿಕೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸುವಂತೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಪಟ್ಟಣದ ಮಿನಿವಿಧಾನಸೌಧದಲ್ಲಿ ಸೋಮವಾರ ನಡೆದ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದ ಶಾಸಕ ಕೆ.ಜಿ ಬೋಪಯ್ಯ ಅವರು, ಎಲ್ಲರ ಮಾತುಗಳನ್ನು ಆಲಿಸಿದ ಬಳಿಕ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿದುಬರುತ್ತಿದೆ. ಅದೃಷ್ಟವಶಾತ್ ತಾಲ್ಲೂಕಿನಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಇಲ್ಲ. ಆದರೂ ಮುನ್ನೆಚ್ಚರಿಕೆ ಅಗತ್ಯವಿದೆ ಎಂದರು.
ಸಾರ್ವಜನಿಕ ಶಿಕ್ಷಣಾ ಇಲಾಖೆಯ ಉಪನಿರ್ದೇಶಕ ಮಚ್ಚಾಡೋ ಮಾತನಾಡಿ, ತಾಲ್ಲೂಕಿನಲ್ಲಿ 2,173 ವಿದ್ಯಾರ್ಥಿಗಳು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಪ್ರತಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಗಳ ಸ್ಯಾನಿಟೈಶೆನ್ ಮಾಡಲಾಗಿದೆ. ಪ್ರತಿ ಪರೀಕ್ಷೆ ಬರೆದ ನಂತರ ಪ್ರತಿದಿನ ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಜ್ವರ, ಗಂಟಲು ನೋವು ಇರುವಂತಹ ವಿದ್ಯಾರ್ಥಿಯನ್ನು ವಿಶೇಷ ಕೋಣೆಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ 7.30 ಕ್ಕೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಹಾಗೂ 8.30ಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಮಾಹಿತಿ ನೀಡಲಾಗಿದೆ ಎಂದರು.
ಪ್ರತಿ ದಿನವೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಎರೆಡೆರೆಡು ಮಾಸ್ಕ್ ನೀಡಲಾಗಿದೆ. ಕುಡಿಯಲು ಮನೆಯಿಂದಲೇ ಬಿಸಿ ನೀರು ತರುವುದು ಉತ್ತಮ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಕರೆದುತರಲು ಎಲ್ಲೆಡೆಯೂ ಬಸ್ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಅಡ್ಮಿಷನ್ ಟಿಕೇಟ್ ತೋರಿಸಿ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಬಹುದಾಗಿದೆ. ಕೆಲವು ವಿದ್ಯಾರ್ಥಿಗಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿದೆ. ಕೇರಳದ ತೋಲ್ಪಟ್ಟಿಯಿಂದ ಪರೀಕ್ಷೆಗೆ ಹಾಜರಾಗುತ್ತಿರುವ ಮೂವರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಆರಂಭದಲ್ಲಿ ತಾಲ್ಲೂಕಿನ 8 ಪರೀಕ್ಷಾ ಕೇಂದ್ರಗಳ ಮುಖ್ಯಶಿಕ್ಷಕರು ತಮ್ಮ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ, ಕೈಗೊಂಡಿರುವ ಸ್ವಚ್ಛತಾ ಕಾರ್ಯ, ಶೌಚಾಲಯ ಹಾಗೂ ಪರೀಕ್ಷಾ ಕೊಠಡಿಗಳ ಸ್ಯಾನಿಟೈಶನ್ ಮಾಡಿರುವ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ ಮಾತನಾಡಿದರು. ತಹಶೀಲ್ದಾರ್ ಎಲ್.ಎಂ.ನಂದೀಶ್, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಭವ್ಯ, ಜಿಲ್ಲಾ ಪಂಚಾಯತಿ ಸದಸ್ಯ ಶಶಿ ಸುಬ್ರಮಣಿ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss