ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಸ್ತುತ ಶಶಿಕಲಾ ಅವರಿಗೆ ಐಸಿಯುನಲ್ಲಿ ಆಮ್ಲಜನಕದ ವ್ಯವಸ್ಥೆ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಜ್ವರ ಮತ್ತು ಕಫದಿಂದ ಬಳಲುತ್ತಿದ್ದ ಶಶಿಕಲಾ ಅವರಿಗೆ ನಿನ್ನೆ ಬೆಳಗ್ಗೆ ಜೈಲಿನಲ್ಲೇ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಿನ್ನೆ ಮಧ್ಯ ರಾತ್ರಿ ಆಸ್ಪತ್ರೆಯ ಸ್ಪೆಷಲ್ ವಾರ್ಡ್ನಿಂದ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೌರಿಂಗ್ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಮನೋಜ್ ಕುಮಾರ್ ಅವರು, ಶಶಿಕಲಾ ಅವರಿಗೆ ತೀವ್ರವಾದ ಉಸಿರಾಟದ ಸೋಂಕಿಗೆ ನಾವು ಚಿಕಿತ್ಸೆ ನೀಡುತ್ತಿದ್ದೇವೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.