spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಶಿಕ್ಷಕರು ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಶಿಕ್ಷಕರು ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಶನಿವಾರ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಟೆರಿಷಿಯನ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಭಾರತ ದೇಶದ ಪರಂಪರೆಯಲ್ಲಿ ಗುರು ಎಂಬ ಪದಕ್ಕೆ ವಿಶೇಷವಾದ ಅರ್ಥವಿದೆ. ಪ್ರತಿಯೊಬ್ಬರಲ್ಲಿರುವ ಅಜ್ಞಾನದ ಅಂಧಕಾರವನ್ನು ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಹಾಗಾಗಿ
ಇಂದಿನ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗಿರದೆ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಕೋವಿಡ್-೧೯ ಬಿಕ್ಕಟ್ಟಿನಲ್ಲಿಯೂ ಜಿಲ್ಲೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿರುವುದು ಅತ್ಯಂತ ಶ್ಲಾಘನೀಯ. ಈ ತಂಡದಲ್ಲಿ ಶ್ರಮಿಸಿದ ಅಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರ ಅತ್ಯಂತ ಅವಿಸ್ಮರಣೀಯ ಎಂದರು.
ಸರ್ಕಾರವು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಹೀಗಾಗಿ ಕಲಿಕೆಯಿಂದ ಯಾವುದೇ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಕೋವಿಡ್-೧೯ ಸಂಕಷ್ಟ ಕಾಲದಲ್ಲಿಯೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಸುವ ಸಲುವಾಗಿ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಈ ಕೆಲಸವು ಸರ್ಕಾರದ ಗಮನ ಸೆಳೆದಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಈ ಬಾರಿ ರಾಷ್ಟೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಅದರ ಸಾಕಾರಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ಹೆಚ್ಚಿನ ಸಿದ್ಧತೆ ಹಾಗೂ ತರಬೇತಿಯನ್ನು ಪಡೆಯಬೇಕಿದೆ. ಶಿಕ್ಷಣ ಇಲಾಖೆ ನೀಡುವ ಪ್ರಶಸ್ತಿ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಮತ್ತು ಕೌಶಲ್ಯವನ್ನು ಧಾರೆ ಎರೆಯುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಮೃಗಾಲಯದ ಪ್ರಾಣಿ, ಪಕ್ಷಿಗಳ ಆಹಾರ ಪೂರೈಕೆ ಹಾಗೂ ನಿರ್ವಹಣೆಗೆ ದಾನಿಗಳಿಂದ ಹಣ ಸಂಗ್ರಹಿಸಿ ಮೃಗಾಲಯಕ್ಕೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದಾರವಾದ ಗುಣ ನಿಜಕ್ಕೂ ಪ್ರಶಂಸನೀಯವಾದದ್ದು ಎಂದು ಹೇಳಿದರು.
ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಇತ್ತೀಚಿನ ಕೋವಿಡ್ ಸಂಕಷ್ಟದ ದಿನಗಳಲ್ಲಿ ಶಿಕ್ಷಕರು ಮಕ್ಕಳಿಗಲ್ಲದೆ, ಎಲ್ಲರಿಗೂ ಶಿಕ್ಷಕರಾಗಿದ್ದಾರೆ. ಕಲಿಕಾ ಸಮಯದಲ್ಲಿ ಶಿಕ್ಷಕರ ಪ್ರಭಾವ ಹೆಚ್ಚಿನ ಮಟ್ಟದಲ್ಲಿ ಮಕ್ಕಳ ಮೇಲೆ ಬೀರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ೨೬ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಈ ವೇಳೆ ಶಾಸಕ ಎಲ್.ನಾಗೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ನಗರಪಾಲಿಕೆಯ ಮೇಯರ್ ತಸ್ನೀಂ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ಶರತ್ ಬಿ., ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಡಿಡಿಪಿಐ ಡಾ.ಪಾಂಡುರಂಗ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap