ಹೊಸದಿಗಂತ ವರದಿ,ಶಿವಮೊಗ್ಗ:
ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ದರ ಹೆಚ್ಚಳ ಮಾಡಿರುವ ಬಿಜೆಪಿ ಸರ್ಕಾರದ ಜನ ವಿರೋಧಿನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬೆಲೆ ನಿಯಂತ್ರಣ, ಜನ ಸಾಮಾನ್ಯರ ಆರ್ಥಿಕ ಸ್ಥಿತಿ ಸುಧಾರಣೆ ಎಂದು ಹೇಳಿಕೊಂಡು ಜನರ ಅನುಕಂಪ ಪಡೆದು ಅಧಿಕಾರಕ್ಕೆ ಬಂದಿರುವ ಬಿಜೆಪಿ ಈಗ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಹಾಗೂ ದುರ್ಬಲ ವರ್ಗದ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾಸ್ ಸಲಿಂಡರ್ ದರವನ್ನು 15 ದಿನಗಳಲ್ಲಿ ಎರಡು ಬಾರಿ 100 ರೂ. ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆಯ ಗ್ಯಾಸ್ಗೆ ಇದ್ದ ಸಹಾಯಧನವನ್ನು ಕಡಿತ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಹೆಚ್ಚಿನ ಹಣ ತೆತ್ತು ಗ್ಯಾಸ್ ಖರೀದಿ ಮಾಡುವಂತಾಗಿದ್ದು, ಇದನ್ನು ಕಡಿಮೆ ಮಾಡುವಂತೆ ಆಗ್ರಹಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ದಿನವೂ ಹೆಚ್ಚಳವಾಗುತ್ತಿದ್ದು, ಲೀಟರ್ಗೆ 100 ರೂ. ಸಮೀಪಿಸುತ್ತಿದೆ. ಇದರಿಂದಾಗಿ ಸರಕು ಸಾಗಾಣಿಕೆ ದರವೂ ತುಟ್ಟಿಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುವಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯಿಂದಾಗಿ ದುಬಾರಿ ಬೆಲೆ ನೀಡುವಂತಾಗಿದೆ ಎಂದು ಹೇಳಿದ್ದಾರೆ.
ಹೆಸ್ಕಾಂಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದಾಗಿ ಸಣ್ಣ ಉದ್ಯಮ, ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗುತ್ತಿದೆ. ಗೃಹ ಬಳಕೆಯ ವಿದ್ಯುತ್ ದರ ಹೆಚ್ಚಳ ವಾಗಿರುವುದರಿಂದ ಜನ ಸಾಮಾನ್ಯರು ವಿದ್ಯುತ್ ಬಳಕೆಗೆ ಹಿಂದೆ ಮುಂದೆ ನೋಡುವಂತಾಗಿದೆ. ಇದಲ್ಲದೆ ನಗರ ಪ್ರದೇಶದಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದರಿಂದ ನಾಗರಿಕರು ಆರ್ಥಿಕ ಹೊರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.