Sunday, July 3, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಕೊರೋನ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಕಳೆದ ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದು, ಶೇಕಡಾ 6.6 ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಗುರುವಾರ ಕರೊನಾ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲೆಯ ಅಂಕಿಅಂಶಗಳ ಮಾಹಿತಿಯನ್ನು ನೀಡಿದರು.
ಜಿಲ್ಲೆಯಲ್ಲಿ ಕಳೆದ ತಿಂಗಳು ಕೊರೋನಾ ಪಾಸಿಟಿವ್ ಪ್ರಕರಣಗಳು ಶೇ.25ರಷ್ಟು ಇತ್ತು. ಇದೀಗ ಶೇ.6.6 ಗೆ ಇಳಿದಿದೆ. ಇದೇ ರೀತಿ ಕರೋನಾ ಸಾವಿನ ಪ್ರಮಾಣದಲ್ಲಿಯೂ ಗಣನೀಯವಾದ ಇಳಿಕೆ ಕಂಡು ಬಂದಿದೆ. ಶೇ.2.5ರಷ್ಟಿದ್ದ ಸಾವಿನ ಪ್ರಮಾಣ ಇದೀಗ 0.9ಕ್ಕೆ ಇಳಿದಿದೆ. ಇದೇ ಅವಧಿಯಲ್ಲಿ ಕೊರೋನಾ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಜಿಲ್ಲೆಗೆ ಪ್ರತಿದಿನ 2250 ಕರೋನಾ ಪರೀಕ್ಷೆ ಮಾಡಲು ಗುರಿ ನಿಗದಿಪಡಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಪ್ರತಿದಿನ 3500ರಿಂದ 3800ವರೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಪ್ರತಿದಿನ 4500ಕ್ಕೂ ಹೆಚ್ಚು ಸ್ಯಾಂಪಲ್ ಸಂಗ್ರಹಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 1.33ಲಕ್ಷ ಜನರಿಗೆ ಕರೋನಾ ಪರೀಕ್ಷೆ ನಡೆಸಲಾಗಿದ್ದು, ಇವರ ಪೈಕಿ 18056ಮಂದಿಗೆ ಪಾಸಿಟಿವ್ ಕಂಡು ಬಂದಿದೆ. ಇವರ ಪೈಕಿ ಪ್ರಸ್ತುತ 1974 ಸಕ್ರಿಯ ಪ್ರಕರಣಗಳು ಇದ್ದು, ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 310ಮಂದಿ ಕರೋನಾದಿಂದ ಸಾವಿಗೀಡಾಗಿದ್ದಾರೆ. ಇವರ ಪೈಕಿ 240ಮಂದಿ ಕರೋನಾ ಜತೆಗೆ ಇನ್ನಿತರ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸಹ ಹೊಂದಿದ್ದರು. 71ಮಂದಿ ಬೇರೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಸಾವಿಗೀಡಾದರಲ್ಲಿ ಬಹುಪಾಲು ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ ಎಂದು ಅವರು ಹೇಳಿದರು.
ಹೋಂ ಕ್ವಾರೆಂಟೈನ್‍ನಲ್ಲಿರುವ 1333 ಮಂದಿಯನ್ನು ನಿರಂತರವಾಗಿ ನಿಗಾ ವಹಿಸಲು 21ವೈದ್ಯರ ತಂಡಗಳನ್ನು ರಚಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಪ್ರತ್ಯೇಕ ವೈದ್ಯರ ತಂಡಗಳನ್ನು ರಚಿಸಲಾಗಿದೆ. ಈ ತಂಡ ಎರಡು ದಿನಗಳಿಗೆ ಒಮ್ಮೆ ಪಾಸಿಟಿವ್ ವ್ಯಕ್ತಿಗಳನ್ನು ಸಂಪರ್ಕಿಸಿ ಆರೋಗ್ಯ ತಪಾಸಣಾ ಕಾರ್ಯ ನಡೆಸುತ್ತಿದ್ದಾರೆ. ಇವರನ್ನು ಹೊರತುಪಡಿಸಿ ಆಶಾ ಕಾರ್ಯಕರ್ತೆಯರು ಸಹ ಕರೋನಾ ಪೀಡಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದರು.ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಪಂ ಸಿಇಓ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss