ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಭಾನುವಾರ ಭೇಟಿ ನೀಡಿ ರಿಂಗ್ ರಸ್ತೆ ಕಾಮಗಾರಿ ಪರಿಶೀಲಿಸಿದರು.
ರಿಂಗ್ ರಸ್ತೆಯಲ್ಲಿರುವ ಟ್ರಾನ್ಸ್ ಫಾರ್ಮರ್ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿನ ನಿವಾಸಿಗಳಿಗೆ ರಸ್ತೆ ದಾಟುವ ಫುಟ್ ಬ್ರಿಡ್ಜ್ ನಿರ್ಮಾಣ ಮಾಡಿಕೊಡುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ರಿಂಗ್ ರಸ್ತೆ ನಿರ್ಮಾಣದ ವೇಳೆ ರಸ್ತೆ ಅಗಲೀಕರಣಗೊಂಡಿದ್ದು, ಇದಕ್ಕೆ ಪರಿಹಾರ ನೀಡಲಾಗಿತ್ತು. ಆದರೆ ಹೆಚ್ಚಿನ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಸಾರ್ವಜನಿಕರು ಸಂಸದರಲ್ಲಿ ಮನವಿ ಮಾಡಿಕೊಂಡರು.
ಡಿಸೆಂಬರ್ ಅಂತ್ಯದ ವೇಳೆಗೆ ರಿಂಗ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದ್ದು ಜನವರಿ ವೇಳೆಯಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ಸವಳಂಗ ರಸ್ತೆ ಮತ್ತು ಬಾಲರಾಜ ರಸ್ತೆಯ ಮೇಲೆ ಇರುವ ಸಂಚಾರ ದಟ್ಟಣೆ ಕಡಿಮೆ ಆಗಲಿದೆ ಎಂದು ಅಂದಾಜಿಸಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್ ಮೊದಲಾದವರು ಉಪಸ್ಥಿತರಿದ್ದರು.