ಬೀದರ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ವಿಪರೀತ ಮಳೆಯಿಂದ ಹಾನಿಗೊಳಗಾದ ಬೀದರ ಜಿಲ್ಲೆಯ ಬೀದರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಗದಲ್ ಗ್ರಾಮದ ಹೊಲಗಳಿಗೆ ಸೋಮವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.
ಬೆಳೆ ಹಾನಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ , ಬೀದರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಕಷ್ಟದಲ್ಲಿರುವ ಈ ಭಾಗದ ರೈತರಿಗೆ ಬೆಳೆಹಾನಿ ಪರಿಹಾರ ನೀಡಲು ಬದ್ಧವಾಗಿವೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಅತಿವೃಷ್ಟಿಯಿಂದ ಬಹಳಷ್ಡು ಬೆಳೆ ಹಾನಿಯಾಗಿದೆ. ಬೀದರ ಜಿಲ್ಲೆಯಲ್ಲಿ ಈ ವರ್ಷ 3 ಲಕ್ಷ 70 ಸಾವಿರ ಹೇಕ್ಟರ್ ಕೃಷಿ ಭೂಮಿ ಅಳವಡಿಸಲಾಗಿತ್ತು. ಇದರಲ್ಲಿ 2 ಲಕ್ಷ 40 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಿಂದ ತಿಳಿದು ಬರುತ್ತದೆ ಎಂದರು.
ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರದ ಕಲ್ಯಾಣ ಕರ್ನಾಟಕ ಸೇರಿದಂತೆ ಪ್ರವಾಹದಿಂದ ಬೆಳೆ ಹಾನಿಗೊಳಗಾದ ರಾಜ್ಯದ ಪ್ರತಿಯೊಬ್ಬ ರೈತರಿಗೆ ಪರಿಹಾರ ನೀಡಲು ಕಟಿಬದ್ಧವಾಗಿದೆ ಎಂದರು.
ಬಸವಕಲ್ಯಾಣ ಉಪ ಚುನಾವಣೆ ಹಾಗೂ ಅತಿವೃಷ್ಟಿ ಕುರಿತು ಪರಿಶೀಲನೆ ಮಾಡಲು ಬಂದಿದ್ದೇನೆ. ಪಕ್ಷ ಸಂಘಟನೆಯ ಜೊತೆ ಜೊತೆಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದು ಬಿಜೆಪಿ ಕಾರ್ಯಕರ್ತನ ಆದ್ಯಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಬೀದರ ಲೋಕಸಭಾ ಸದಸ್ಯರಾದ ಭಗವಂತ ಖೂಬಾ, ಪಕ್ಷದ ಮುಖಂಡರಾದ ಈಶ್ವರಸಿಂಗ ಠಾಕೂರ, ಡಾ. ಶೈಲೇಂದ್ರ ಬೆಲ್ದಾಳೆ ಅವರು ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.