Sunday, July 3, 2022

Latest Posts

ಸಚಿವ ಸ್ಥಾನ ಯಾರಿಗೆ ಕೊಡಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ: ಸಂಸದ ಜಿ.ಎಂ.ಸಿದ್ದೇಶ್ವರ

ಹೊಸ ದಿಗಂತ ವರದಿ, ದಾವಣಗೆರೆ:

ರೇಣುಕಾಚಾರ್ಯ ಸೇರಿದಂತೆ ಎಲ್ಲರೂ ತಂತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು. ಆದರೆ ಸಚಿವ ಸ್ಥಾನ ಯಾರಿಗೆ ಕೊಡಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಆ ಭಾಗದಲ್ಲಿ ಪ್ರಭಾವಿ ಒಕ್ಕಲಿಗ ನಾಯಕ. ಹಾಗಾಗಿ ಅವರಿಗೆ ಸಚಿವ ಸ್ಥಾನ ಕೊಡುತ್ತಿರಬಹುದು. ಹೆಚ್.ವಿಶ್ವನಾಥ್ ಹಿರಿಯರು. ಅವರಿಗೆ ಉತ್ತರ ಕೊಡುವಷ್ಟು ನಾನು ದೊಡ್ಡವನಲ್ಲ. ಎಲ್ಲವನ್ನು ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿಗಳು ಗಮನಿಸುತ್ತಿದ್ದು, ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದರು.
ಜಿಲ್ಲೆಯಿಂದ ಇಂತಹವರಿಗೇ ಸಚಿವ ಸ್ಥಾನ ಕೊಡಿರೆಂದು ನಾನೇನು ಹೇಳಿಲ್ಲ. ಯಾರಿಗೆ ಕೊಟ್ಟರೂ ಸಂತೋಷವೇ. ರೇಣುಕಾಚಾರ್ಯರಿಗೆ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಅದನ್ನೆಲ್ಲಾ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ ಎಂದು ಅವರು ನುಡಿದರು.
ಸರ್ಕಾರಿ ಜಾಗದಲ್ಲಿ ಯಾರೇ ಕಟ್ಟಡ ಕಟ್ಟಿದ್ದರೂ ಅದು ಅಕ್ರಮವೇ. ಮಹಾನಗರ ಪಾಲಿಕೆಯವರು ಅದನ್ನು ತೆರವುಗೊಳಿಸಬೇಕಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಫುಟ್‌ಪಾತ್ ಅತಿಕ್ರಮಿಸಿಕೊಂಡಿರುವ ಅಂಗಡಿ-ಮುಂಗಟ್ಟುಗಳನ್ನೂ ತೆರವುಗೊಳಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಿಗೆ ಯಾವುದೇ ಅಧಿಕಾರವಿಲ್ಲ ಎಂಬುದು ಸರಿಯಲ್ಲ. ಏನಾದರೂ ಸಮಸ್ಯೆ ಇದ್ದರೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿ ಎಂದರಲ್ಲದೆ, ಕೋವಿಡ್ ಕಾರಣಕ್ಕೆ ಒಂದಷ್ಟು ಆರ್ಥಿಕ ಸಂಕಷ್ಟ ಎದುರಾಗಿದೆ. ಇನ್ನು ಮುಂದೆ ರಾಜ್ಯದ ಪಾಲಿನ ಜಿಎಸ್‌ಟಿ ಹಣ ಬರಲಿದೆ ಎಂದು ಅವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss