Wednesday, August 10, 2022

Latest Posts

ಸಮರ್ಥ ರೀತಿಯಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಚಿವ ಅಂಗಾರ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕೊರೋನಾ ಸೋಂಕಿನಿಂದ ಜನಸಾಮಾನ್ಯರು ಅನುಭವಿಸುತ್ತಿರುವ ನೋವು ಮನಸ್ಥಿತಿಗಳನ್ನು ಅರ್ಥ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೋವಿಡ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಡಳಿತ ವ್ಯವಸ್ಥೆಯಲ್ಲಿ ಕಾನೂನು ಒಂದು ಭಾಗವಾಗಿದ್ದು, ಅದು ಜನಸಾಮಾನ್ಯ ಒಳಿತಿಗೆ ಪೂರಕವಾಗಿರಬೇಕೆ ಹೊರತು ಮಾರಕವಾಗಬಾರದು. ಕೋವಿಡ್ ನಿಯಂತ್ರಣದ ಕುರಿತು ನಡೆದ ಸಭೆಗಳಲ್ಲಿ ಪ್ರಸ್ತಾಪವಾದ ವಿಷಯಗಳು ಪುನಃ ಪ್ರಸ್ತಾಪವಾಗದೇ ಕಾರ್ಯರೂಪಕ್ಕೆ ತರಬೇಕು ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವೈದ್ಯರು ಶಿಫಾರಸು ಮಾಡುವ ಸೋಂಕಿತರಿಗೆ ಸರಿಯಾದ ರೀತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಹಾಸಿಗೆಗಳು ದೊರಕುತ್ತಿದೆಯೇ ಎಂಬ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆ ಹಾಗೂ ಆಕ್ಸಿಜನ್‍ಗಳ ಕೊರತೆ ಉಂಟಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಇದು ಸರಿಯಲ್ಲ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಅದಕ್ಕಾಗಿ ನಿಖರವಾದ ಮಾಹಿತಿಯನ್ನು ಜಿಲ್ಲಾಡಳಿತವು ತಿಳಿಸಬೇಕು ಎಂದು ಹೇಳಿದರು.
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಜನ ಹೋಂ ಕ್ವಾರಂಟೈನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಸುತ್ತಮುತ್ತಲಿನ ಜನರಿಗೂ ಸಹ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಅಂತಹ ಮನೆಗಳನ್ನು ಗುರುತಿಸುವ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.
ಶಾಸಕ ಸಿ.ಟಿ.ರವಿ ಮಾತನಾಡಿ, ಪ್ರತಿನಿತ್ಯ ಪ್ರಸಾರವಾಗುತ್ತಿರುವ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್, ವೆಂಟಿಲೇಟರ್ ಹಾಗೂ ಹಾಸಿಗೆಗಳ ಬಗ್ಗೆ ಮಾಹಿತಿಯನ್ನು ನೀಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿರ್ವಹಣೆಗಾಗಿ ಸ್ಯಾನಿಟೈಸರ್, ಮೆಡಿಕಲ್ ಕಿಟ್‍ಗಳನ್ನು ಒದಗಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು ಎಂದು ಹೇಳಿದರು.
ಮಳೆಗಾಲ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ರೈತರಿಗೆ ಬಿತ್ತನೆ ಬೀಜಗಳು ಸರಿಯಾದ ರೀತಿಯಲ್ಲಿ ಸಿಗುವಂತೆ ಹಾಗೂ ಕೋವಿಡ್ ಹಿನ್ನಲೆಯಲ್ಲಿ ರಸಗೊಬ್ಬರದ ಬೆಲೆಯನ್ನು ಹೆಚ್ಚಿಸುವಂತಿಲ್ಲ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ದರ ನಿಗಧಿಪಡಿಸಿಲ್ಲ. ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇರುವಂತವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಹಾಗೂ ಎಪಿಲ್ ಕಾರ್ಡ್ ಹೊಂದಿರುವವರಿಗೆ ಶೇ.30 ರಿಯಾಯಿತಿಯನ್ನು ನೀಡಲಾಗುವುದು. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳಬಾರದು. ಕೋವಿಡ್ ಸೋಂಕಿತರಿಗೆ ಹೆಲ್ಪ್ ಲೈನ್ ತಂಡಗಳು ಸರಿಯಾದ ರೀತಿಯಲ್ಲಿ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ವೆಂಟಿಲೇಟರ್ ಹಾಗೂ ಅವುಗಳನ್ನು ನಿರ್ವಹಿಸುವ ಸಿಬ್ಬಂದಿಗಳ ಕೊರತೆ ಇದ್ದು, ಅವುಗಳ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ನೇಮಿಸಿಕೊಂಡು ಅವರಿಗೆ ತರಬೇತಿಯನ್ನು ನೀಡಬೇಕು ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರಿಗೆ ಕೋವಿಡ್ ಸೋಂಕು ತಗುಲಿದಲ್ಲಿ ಅಂತವರನ್ನು ಸಮುದಾಯ ಭವನ ಹಾಗೂ ವಸತಿ ಶಾಲೆಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಿದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇದುವರೆಗೂ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ತರೀಕೆರೆ ಶಾಸಕ ಡಿ.ಎಸ್.ಸುರೇಶ್, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss