ಮಡಿಕೇರಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣ ಜಾಯ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದಿನ ವರ್ಷಗಳಿಗಿಂತ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಮತ್ತು ಸರಳ ರೀತಿಯಲ್ಲಿ ತೀರ್ಥೋದ್ಭವವನ್ನು ಆಚರಿಸುವಂತಾಗಬೇಕು. ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಜಿಲ್ಲೆಯ ಜನತೆ ಪ್ರಸ್ತುತ ಪರಿಸ್ಥಿಯನ್ನು ಅರ್ಥಮಾಡಿಕೊಂಡು ಪ್ರವಾಸಿಗರು, ಹಿರಿಯರು, ಮಕ್ಕಳು, ಗರ್ಭಿಣಿ ಮಹಿಳೆಯರು, ಇನ್ನಿತರ ಆರೋಗ್ಯ ಸಮಸ್ಯೆಯಿರುವವರು ಮನೆಯಿಂದಲೇ ಮಾಧ್ಯಮಗಳ ಮೂಲಕ ನೇರಪ್ರಸಾರ ವೀಕ್ಷಣೆ ಮಾಡುವಂತಾಗಬೇಕು ಎಂದು ಅವರು ಕೋರಿದರು.
ಕೋವಿಡ್-19 ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದೆ. ತೀರ್ಥೋದ್ಭವ ಸಂದರ್ಭ ಹೆಚ್ಚಿನ ಜನ ಆಗಮಿಸಿದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂಬಂಧ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆದಿದ್ದು. ಸಭೆಯ ನಿರ್ಧಾರದಂತೆ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರು ಮಾತನಾಡಿ ಅಕ್ಟೋಬರ್ 14 ಮತ್ತು 15 ರಂದು ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷಾ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಮಡಿಕೇರಿ ತಹಶೀಲ್ದಾರ್ ಮಹೇಶ್, ಲೋಕೋಪಯೋಗಿ ಇಲಾಖೆಯ ಇಇ ಮದನ್ ಮೋಹನ್, ಎಇಇ ಶಿವರಾಂ, ಚೆಸ್ಕಾಂ ಇಇ ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ದಿವಾಕರ್, ಮೇದಪ್ಪ, ಅನೂಪ್ ಮಾದಪ್ಪ, ಮಡಿಕೇರಿ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಭಗಂಡೇಶ್ವರ ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ ಅನಿತಾ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್.ಎಂ ಕಾವೇರಪ್ಪ, ಉದಿಯಂಡ ಸುಭಾಷ್ ಇತರರು ಇದ್ದರು.