Friday, July 1, 2022

Latest Posts

ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ: ಬಿ.ವೈ.ವಿಜಯೇಂದ್ರ

ಮೈಸೂರು: ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಬುಧವಾರ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಶ್ರೀ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಕೊರತೆ ಇದೆ. ಆದ್ದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ಕೈಜೋಡಿಸಿ, ಹೆಚ್ಚು ಕೆಲಸ ಮಾಡುವ ಮೂಲಕ ಈ ಭಾಗದಲ್ಲಿ ಹೆಚ್ಚು ಪ್ರವಾಸಮಾಡಿ ಸಂಘಟನೆ ಮಾಡುತ್ತೇನೆ ಎಂದರು
ಮುಂದೆ ಬರುವಂತಹ ಗ್ರಾಮ ಪಂಚಾಯತ್ ಚುನಾವಣೆಗಳು ನಾಯಕತ್ವ ಸೃಷ್ಟಿ ಮಾಡುವಂತಹ ಚುನಾವಣೆಗಳಾದ್ದರಿಂದ, ಪಕ್ಷ ಸಂಘಟನೆಗಾಗಿ ಪ್ರವಾಸ ಕೈಗೊಂಡಿದ್ದೇನೆ. ಪಕ್ಷದ ಕಾರ್ಯಕರ್ತರ ಮೇಲೆ ನನಗೆ ನಂಬಿಕೆ ಇದೆ. ಬರುವಂತಹ ಚುನಾವಣೆಗಳು ನಿಮ್ಮ ಚುನಾವಣೆ ಎಂದು ಎದುರಿಸಬೇಕು. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂದು ನಂಬಿಕೆ ಇದೆ ಎಂದರು.
ನಾನು ವರುಣ ವಿಧಾನಸಭಾ ಕ್ಷೇತ್ರಕ್ಕೆ ಐದು ಬಾರಿ ಭೇಟಿ ನೀಡಿದ್ದೇನೆ. ಶಿಕಾರಿಪುರ ಕ್ಷೇತ್ರಕ್ಕೆ ಎರಡು ಬಾರಿ ಭೇಟಿ ನೀಡಿದ್ದೇನೆ. ಅಂದ ಮೇಲೆ ನೀವೇ ಅರ್ಥ ಮಾಡಿಕೊಳ್ಳಿ. ನನಗೆ ರಾಜಕೀಯ ಜನ್ಮ ನೀಡಿದ ವರುಣ ವಿಧಾನಸಭಾ ಕ್ಷೇತ್ರವನ್ನು ಮರೆಯಲಾಗುವುದಿಲ್ಲ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಇಚ್ಚೆ ಇದೆ. ಪಕ್ಷದ ಹೈಕಮಾಂಡ್ ಏನು ಸೂಚನೆ ನೀಡುತ್ತದೆ ಅದೇ ರೀತಿ ನಡೆದುಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ರಾಜೀವ್, ಮುಖಂಡರಾದ ಸುಬ್ಬಣ್ಣ, ಎಸ್ ಮಾದೇವಯ್ಯ, ವಿನಯ್, ಬಾಲಚಂದ್ರ, ತಾಲೂಕು ಅಧ್ಯಕ್ಷ ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ಬಸವರಾಜು, ನಗರಸಭಾ ಸದಸ್ಯ ಮಾದೇವ ಪ್ರಸಾದ್, ಮಾದೇಸ್ವಾಮಿ, ಕೃಷ್ಣಪ್ಪ ಗೌಡ ಸೇರಿದಂತೆ ಹಲವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss