ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನ ವಿಪರೀತ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂಬ ಹೊಸ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಈ ಮಹತ್ವಾಕಾಂಕ್ಷೆಯ ಯೋಜನೆಯಡಿ, ರಸ್ತೆಯ ಒಟ್ಟು ಜಾಗದಲ್ಲಿ ಶೇಕಡಾ 65ರಷ್ಟು ಭಾಗವನ್ನು ಸಂಚಾರಕ್ಕೆ ಮೀಸಲಿಡಲಾಗಿದ್ದರೆ, ಉಳಿದ ಶೇಕಡಾ 35ರಷ್ಟು ಜಾಗವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಲು ನಿರ್ಧರಿಸಲಾಗಿದೆ. ಈ ಹೊಸ ಕಾರಿಡಾರ್‌ನಲ್ಲಿ ಸಂಚರಿಸುವ ವಾಹನ ಸವಾರರು ಟೋಲ್ ಪಾವತಿಸಬೇಕಾಗುತ್ತದೆ.
ಭೂ ಮಾಲೀಕರಿಗೆ ಪರಿಹಾರ ರೂಪದಲ್ಲಿ ವಾಣಿಜ್ಯ ಅವಕಾಶ
ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಈ ಹಿಂದೆ ಯೋಜಿಸಿದ್ದ ಪೆರಿಫೆರಲ್ ರಿಂಗ್ ರೋಡ್ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಈಗ ಬೆಂಗಳೂರಿಗೆ ಪರ್ಯಾಯ ರಸ್ತೆಯ ಅಗತ್ಯವಿದ್ದು, ಹಾಗಾಗಿ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅನ್ನು ಆರಂಭಿಸುತ್ತಿದ್ದೇವೆ” ಎಂದರು.
ಈ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕಾಯಿದೆಯಲ್ಲಿ ಪೂರ್ಣ ಪ್ರಮಾಣದ ಪರಿಹಾರಕ್ಕೆ ಅವಕಾಶ ಇಲ್ಲದ ಕಾರಣ, ಭೂ ಮಾಲೀಕರಿಗೆ ಪರಿಹಾರದ ರೂಪದಲ್ಲಿ ರಸ್ತೆಯ ಪಕ್ಕದ ವಾಣಿಜ್ಯ ಚಟುವಟಿಕೆಗಳಲ್ಲಿ ಅವಕಾಶ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು. ಈ ಯೋಜನೆಯು ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ನಗರದ ಬೆಳವಣಿಗೆಗೆ ಯೋಜನೆ
ಈ ಹೊಸ ಕಾರಿಡಾರ್‌ನ ಮುಖ್ಯ ಉದ್ದೇಶವೆಂದರೆ, ಬೆಂಗಳೂರಿನ ಕೇಂದ್ರ ಭಾಗದಲ್ಲಿನ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ನಗರದ ಹೊರವಲಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು ಆಗಿದೆ.
ಈ ರಸ್ತೆಯು ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ನೈಸ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಿಗೆ ಮತ್ತು ಮೆಟ್ರೋ, ಉಪನಗರ ರೈಲು ಹಾಗೂ ಉಪಗ್ರಹ ಟೌನ್ ರಿಂಗ್ ರೋಡ್ನಂತಹ ಇತರೆ ಮೂಲಸೌಕರ್ಯಗಳಿಗೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯು ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಮೈಸೂರು ರಸ್ತೆಯವರೆಗೂ ವಿಸ್ತರಿಸಲಿದೆ.

