ಮೈಸೂರು: ರೈತ ದಸರಾಗೆ ಸಚಿವರಿಂದ ಚಾಲನೆ, ಕಲಾತಂಡಗಳಿಂದ ವೈಭವದ ಮೆರವಣಿಗೆ

ಹೊಸದಿಗಂತ ವರದಿ, ಮೈಸೂರು:
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಇಂದು ರೈತ ದಸರಾಗೆ ಚಾಲನೆ ನೀಡಿದರು.
ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಪ್ರತಿ ತಾಲೂಕಿನಲ್ಲಿ ರೈತ ದಸರಾ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕೃಷಿಕರ ಬಗ್ಗೆ ಸಾಕಷ್ಟು ಕಾಳಜಿ ಹೊಂದಿರುವ ಸಚಿವ ಬಿ‌.ಸಿ.ಪಾಟೀಲ್ ಅವರು, ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಮೂಲಕ ರೈತರ ಕಷ್ಟಸುಖಗಳನ್ನು ಆಲಿಸುವುದರ ಜೊತೆಗೆ ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ಎಂದರು.


ನಂತರ ಸಚಿವರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆ, ಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ ಮೆರವಣಿಗೆಯಲ್ಲಿ ಸಾಗಿದವು.
ಶಾಸಕ ಜಿ.ಟಿ.ದೇವೇಗೌಡ,ನಗರಪಾಲಿಕೆ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಳಸಂತೆಯಲ್ಲಿ ಗೋಲ್ಡ್ ಕಾರ್ಡ್ ಮಾರಾಟ ಮಾಡುವವರ ವಿರುದ್ಧ ಕ್ರಮ:
ಕಾಳಸಂತೆಯಲ್ಲಿ ಗೋಲ್ಡ್ ಕಾರ್ಡ್ ಮಾರಾಟದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವುದಾಗಿ ಪ್ರಕಟಣೆ ಹೊರಡಿಸಿದ್ದಾರೆ. ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!