ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪದಡಿ ದಾಖಲಾದ ಎಫ್ಐಆರ್ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು ಆರ್ಆರ್ ನಗರದ ಬಿಜೆಪಿ ಶಾಸಕ ಎನ್. ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಕೊಟ್ಟ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.
ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇನ್ಸ್ಪೆಕ್ಟರ್ ಅವರು ನೋಟಿಸ್ ಜಾರಿ ಮಾಡಿದ್ದು, ಇಂದು ಅಥವಾ ನಾಳೆ ಮುನಿರತ್ನ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ನೀಡಿದ ದೂರಿನ ಅನ್ವಯ ಚಿಕ್ಕಜಾಲ ಠಾಣಾ ಪೊಲೀಸರು ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.