ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗಿದ್ದ 1.68 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ದುಬೈನಿಂದ ಬಂದ ಇಬ್ಬರು ಪ್ರಯಾಣಿಕರು ಕಸ್ಟಮ್ಸ್ ಬಲೆಗೆ ಬಿದ್ದಿದ್ದಾರೆ. ಅಕ್ರಮ ಚಿನ್ನದ ವಹಿವಾಟಿನ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಆರೋಪಿ ತನ್ನ ಬಟ್ಟೆಯಲ್ಲಿ ಬಚ್ಚಿಟ್ಟು ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿದ್ದ.
ದುಬೈನಿಂದ ಬರುವ ವಿಮಾನದ ಮೂಲಕ ಚಿನ್ನ ಸಾಗಿಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರನ್ನು ಕೂಲಂಕುಷವಾಗಿ ಶೋಧಿಸಲಾಗಿದ್ದು, ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.