Saturday, September 27, 2025

ರಸ್ತೆಗುಂಡಿ ಮುಚ್ಚಲು 1 ತಿಂಗಳು ಗಡುವು: ಇಂಜಿನಿಯರ್ ಅಮಾನತ್ತಿಗೆ ಸಿದ್ದರಾಮಯ್ಯ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು ಗುಂಡಿ ಮುಚ್ಚುವಂತೆ ರಾಜ್ಯ ಸರ್ಕಾರ ನವೆಂಬರ್ ತಿಂಗಳ ಡೆಡ್ ಲೈನ್ ಹಾಕಿಕೊಂಡಿದೆ.

ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದರು. ಅಧಿಕೃತ ನಿವಾಸ ಕಾವೇರಿಯಿಂದ ಹೊರಟ ಸಿದ್ದರಾಮಯ್ಯ ವಿಂಡ್ಸರ್ ಮ್ಯಾನರ್ ಸಮೀಪ ರಸ್ತೆಯ ಮೇಲೆ ಮಳೆ ನೀರು ಸಂಗ್ರಹವಾಗುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ನೀರು ನಿಲ್ಲಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆದರು.

ಬಳಿಕ ವಿಬ್ ಗಯಾರ್ ರಸ್ತೆಗೆ ಭೇಟಿ ನೀಡಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಪರಿಶೀಲನೆ ನಡೆಸಿದರು. ಆ ನಂತರ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ರಸ್ತೆ ಗುಂಡಿಗಳಿಗೆ ಜಲ್ಲಿ ಹಾಕಿ ಬಿಡೋದಲ್ಲ. ಸರಿಯಾಗಿ ನಿರ್ವಹಿಸಬೇಕು. ವೇಗವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ಪಣತ್ತೂರು ಟಿ ಕ್ರಾಸ್ ಬಳಿ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯ, ಸಿಸಿಟಿವಿ ಅಳವಡಿಸಿ ಕ್ರಮ ಕೈಗೊಳ್ಳಲು ಮತ್ತು ಬಿಬಿಎಂಪಿ ಮಾರ್ಷಲ್ ಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ತ್ಯಾಜ್ಯ ಸುರಿಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳದಲ್ಲಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದ್ದು, ಈ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣ ಹೆಣ್ಣೂರು ಬಾಗಲೂರು ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ನ್ನು ಅಮಾನತ್ತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಹಾಗೇ ಬಿಟ್ಟಿದ್ದ ಕಾರಣ, ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಹೆಣ್ಣೂರು ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ನಿರ್ವಹಣೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. 5 ಕಿ.ಮೀ ರಸ್ತೆ ಕಾಮಗಾರಿಯನ್ನು ಕಿ.ಮೀ. ಒಂದಕ್ಕೆ 13 ಕೋಟಿಗಳನ್ನು ಸರ್ಕಾರ ವ್ಯಯಿಸುತ್ತಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ರಸ್ತೆಗಳಲ್ಲಿ ಯಾವುದೇ ಗುಂಡಿಗಳಿಲ್ಲದಂತೆ ಮುಚ್ಚಬೇಕೆಂದು ಸೂಚನೆ ನೀಡಲಾಗಿದೆ.