ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ 8 ಪ್ರಮುಖ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಈ ಪೈಕಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಮತ್ತೋರ್ವನ ಬಂಧನವಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮೇ 4ರದಂದು ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವ ವೀಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದರಿಂದ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾದ ಬಳಿಕ ಗುರುವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಭಯಾನಕ ಘಟನೆಯ 77 ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಪ್ರಕಾರ, ಪುರಾವೆಗಳ ಕೊರತೆಯಿಂದಾಗಿ ಅವರು ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಭಯಾನಕ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡ ಆರೋಪಿಗಳ ಪೈಕಿ ಓರ್ವನ ಮನೆಗೆ ಗುರುವಾರ ಗ್ರಾಮಸ್ಥರ ಗುಂಪೊಂದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.