ಹೊಸ ದಿಗಂತ ವರದಿ, ಮಡಿಕೇರಿ:
ರಾಜ್ಯ ಸರ್ಕಾರ ಕೊಡವರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವೆಂದು ಹರ್ಷ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಬಿಜೆಪಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ, ಮುಖ್ಯಮಂತ್ರಿಗಳು ನಿಗಮಕ್ಕೆ 100 ಕೋಟಿ ರೂ. ಅನುದಾನವನ್ನು ಮೀಸಲಿಡಬೇಕೆಂದು ಮನವಿ ಮಾಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡವರ ಅನೇಕ ವರ್ಷಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಈಡೇರಿಸಿದ್ದಾರೆ. ಅವರಿಗೆ ನಾವು ಚಿರೃಣಿಗಳಾಗಿದ್ದೇವೆ. ಕೊಡವರ ಸರ್ವಾಂಗೀಣ ಅಭಿವೃದ್ಧಿಗಾಗಿ ಇರುವ ನಿಗಮಕ್ಕೆ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಯುನೈಟೆಡ್ ಕೊಡವ ಆರ್ಗನೈಸೇಷನ್ ಸಂಘಟನೆ ನಿಗಮ ಸ್ಥಾಪನೆಯ ಬೇಡಿಕೆ ಇಟ್ಟಾಗ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ತಾವು ಸೇರಿದಂತೆ ಅನೇಕರು ಬೆಳಗಾವಿಗೆ ನಿಯೋಗ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೆವು. ಅಂದು ಸಿಎಂ ನೀಡಿದ ಭರವಸೆ ಇಂದು ಈಡೇರಿದ್ದು, ಶಾಸಕರಾದ ಕೆ.ಜಿ.ಬೋಪಯ್ಯ, ಯುಕೊ ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರುಗಳು ಅಭಿನಂದನಾರ್ಹರು ಎಂದು ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ.