ರಾಜ್ಯದಲ್ಲಿ ಸಂಭವಿಸಿದ 2 ಭೀಕರ ಅಪಘಾತದಲ್ಲಿ 14 ಸಾವು: ಸಿಎಂ ಸಿದ್ದರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇಂದು ಮುಂಜಾನೆ ಹಾಗೂ ನಿನ್ನೆ ತಡರಾತ್ರಿಯಲ್ಲಿ ಅಪಘಾತ ಸಂಭವಿಸಿದ್ದು, ಒಟ್ಟಾರೆ 14 ಮಂದಿ ಪ್ರಾಣಬಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿಯಾಗಿದ್ದು, ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾವೇರಿಯಿಂದ ಕುಮಟಾದ ಕಡೆ ಹಣ್ಣು ತರಕಾರಿ ತುಂಬಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಭಾಗಕ್ಕೆ ಬರುತ್ತಿದ್ದಂತೆ ಚಾಲಕನ ನಿರ್ಲಕ್ಷದಿಂದ ಪಲ್ಟಿಯಾಗಿದೆ. ಸ್ಥಳದಲ್ಲೇ 9 ಜನರ ಪ್ರಾಣಬಿಟ್ಟಿದ್ದಾರೆ. ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಐದು ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 ಜೀವ ಕಳೆದುಕೊಂಡವರೆಲ್ಲ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರು ಎಂದು ತಿಳಿದುಬಂದಿದೆ. ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ ಬಾಷಾ (26) ಜೀವ ಕಳೆದುಕೊಂಡವರು.

ದುರ್ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಜೀವ ಕಳೆದುಕೊಂಡಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!