ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರಿಯಾನಿ ತಿಂದು 17 ಜನರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮನೆಯೊಂದರಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಊಟಕ್ಕೆ ಬಿರಿಯಾನಿ ಅನ್ನು ಬಡಿಸಲಾಗಿದೆ.
ಬಿರಿಯಾನಿ ಸೇವಿಸಿದ ಬಳಿಕ ಕೆಲವರಿಗೆ ವಾಂತಿ, ಭೇಧಿ ಕಾಣಿಸಿಕೊಂಡಿದೆ. ಕೆಲವರು ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಂಬ್ಯುಲೆನ್ಸ್ ಸಹಾಯದಿಂದ ಎಲ್ಲರನ್ನೂ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಭಾನುವಾರ ತಯಾರಿಸಿದ ಆಹಾರವನ್ನು ಸೋಮವಾರದಂದು ಸೇವಿಸಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಇದರಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿಷಯ ತಿಳಿದ ಬಳಿಕ ಕಡೂರು ಶಾಸಕ ಕೆ. ಎಸ್. ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ಪಸ್ಥಗೊಂಡ ರೋಗಿಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.