ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 195 ತಾಲೂಕುಗಳು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಇಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ, ಈ ಪೈಕಿ 161 ತಾಲೂಕುಗಳು ತೀವ್ರವಾದ ಬರ ಪರಿಸ್ಥಿತಿ ಎದುರಿಸುತ್ತಿವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮುಖ್ಯಮಂತ್ರಿಗಳು ಇಂದು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದು, ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.
ಮೊದಲು ಬರ ಘೋಷಣೆ ಮಾಡುತ್ತೇವೆ, ನಂತರ ಪರಿಹಾರ ಘೋಷಣೆ ಮಾಡಲಿದ್ದೇವೆ. 113 ತಾಲೂಕುಗಳನ್ನು ಆಯ್ಕೆ ಮಾಡಿ ಸಮೀಕ್ಷೆಗೆ ಆದೇಶ ನೀಡಿದ್ದೇವೆ. ಎಲ್ಲಾ ಜಿಲ್ಲೆಗಳಿಂದಲೂ ಸಮೀಕ್ಷೆ ವರದಿ ಬಂದಿಲ್ಲ. 161 ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. 34 ತಾಲೂಕುಗಳಲ್ಲಿ ಸಾಧಾರಣವಾಗಿದೆ. 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ. ಆದರೆ ಇದೇ ಅಂತಿಮವಲ್ಲ, ಶೀಘ್ರದಲ್ಲೇ ಸಂಪೂರ್ಣ ಮಾಹಿತಿ ಪಡೆದು ಬರ ಪೀಡಿತ ತಾಲೂಕುಗಳ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.